ಬೆಂಗಳೂರು: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ಸಮೀಪ ಶಂಭುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆಯ ಮಾರ್ಗದ ಮೂಲಕ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ಓಡಾಡಲು ಅನುಮತಿ ನೀಡಬೇಕೆಂದು ಕೋರಿ ಇಂಧನ ಸಚಿವ ಕೆ.ಜೆ. ಜಾರ್ಜ್ ಪುತ್ರ ರಾಣಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ಸಂಬಂಧ ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ. ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ 2024ರ ಮಾರ್ಚ್ 1ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಕೋರಿ ರಾಣಾ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಸರ್ಕಾರ, ಅರಣ್ಯ ಇಲಾಖೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದೆ.