ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ನಡೆಸುತ್ತಿದ್ದ 487 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆವರೆಗೆ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೆಎಂಎಫ್ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ ತಿದ್ದಲಾಗಿದೆ. ಪ್ರತಿ ಹುದ್ದೆಗೆ 30 ರಿಂದ 50 ಲಕ್ಷ ರೂ. ವರೆಗೆ ಲಂಚ ಪಡೆದಿರುವುದಾಗಿ ಆರೋಪಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಐದು ಸಂಘಗಳು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಬಿ. ಬೀರಪ್ಪ, ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯಕ್ ಅವರಿದ್ದ ವಿಭಾಗಿಯ ಪೀಠ ತಡೆಯಾಜ್ಞೆ ನೀಡಿದೆ.
ಅರ್ಜಿದಾರರ ಪರ ವಾದ ಆಲಿಸಿದ ನಂತರ ಮಧ್ಯಂತರ ಆದೇಶ ನೀಡಿದ್ದು, ಪ್ರತಿವಾದಿಗಳಾದ ಸರ್ಕಾರ, ಕೆಎಂಎಫ್, ಗುಜರಾತ್ ಮೂಲದ ನೇಮಕಾತಿ ಏಜೆನ್ಸಿ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ ಮತ್ತು ಸಿಐಡಿ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಅರ್ಜಿದಾರರ ಪರ ನ್ಯಾಯವಾದಿ ಡಿ.ಆರ್. ರವಿಶಂಕರ್ ವಾದ ಮಂಡಿಸಿ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಲಿಖಿತ ಪರೀಕ್ಷೆಯಲ್ಲಿ ಕನ್ನಡವೂ ಒಂದು ವಿಷಯವಾಗಿದ್ದು, ನೇಮಕ ಪರೀಕ್ಷೆ ನಡೆಸಿ ಅನುಭವ ಇಲ್ಲದ ಕನ್ನಡದ ಬಗ್ಗೆ ಜ್ಞಾನವಿಲ್ಲದ ಗುಜರಾತ್ ನ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ ಗೆ ಜವಾಬ್ದಾರಿ ನೀಡಲಾಗಿದೆ. ಅದಕ್ಕೂ ಮುಖ್ಯವಾಗಿ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಸಂದರ್ಶಕರಿಗೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.