ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ಲೀಟರ್ ಹಾಲಿನ ದರ 1 ರಿಂದ 2 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರತಿ ಲೀಟರ್ ನಂದಿನಿ ಹಾಲಿನ ಮಾರಾಟ ದರ 5 ರೂಪಾಯಿ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳು ಒತ್ತಾಯಿಸಿದ್ದು, ಶೀಘ್ರವೇ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಹಾಲಿನ ದರ ಹೆಚ್ಚಳದ ಬಗ್ಗೆ ಸದ್ಯಕ್ಕೆ ಕೆಎಂಎಫ್ ನಿಂದ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಪಶು ಆಹಾರ, ವಿದ್ಯುತ್ ದರ ಹೆಚ್ಚಳ, ಸಾಗಾಣಿಕೆ ವೆಚ್ಚ, ನಿರ್ವಹಣೆ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ.
ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಭರವಸೆ ನೀಡಿದ್ದು, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟದಂತೆ ಪ್ರತಿ ಲೀಟರ್ ಗೆ 1ರಿಂದ 2 ರೂ. ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.