ಮಂಗಳೂರು: ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಚಿಕಿತ್ಸೆ ದರ ಹೆಚ್ಚಳ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶಸ್ವಿನಿ ವಿಮಾ ಯೋಜನೆಯಡಿ ಚಿಕಿತ್ಸೆ ನೀಡಲು ವೈದ್ಯರು, ಆಸ್ಪತ್ರೆಯ ಆಡಳಿತ ಮಂಡಳಿ ಸಭೆ ನಡೆಸಿ ಮನವರಿಕೆಗೆ ಮಾಡಿದ್ದು, ಅವರ ಬೇಡಿಕೆಯಂತೆ ದರ ಹೆಚ್ಚಳ ಮಾಡಲಾಗಿದೆ. ಯಶಸ್ವಿನಿ ಯೋಜನೆಗೆ ಸೇರ್ಪಡೆಗೊಂಡ ಸದಸ್ಯರಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ವೈದ್ಯರು ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಮತ್ತೆ ಜಾರಿಗೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ.
ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಿದ್ದು, ಮತ್ತೆ ದರ ಏರಿಕೆ ಮಾಡುವುದಿಲ್ಲ. ಬೇರೆ ರೀತಿಯಲ್ಲಿ ರೈತರಿಗೆ ಉಪಯೋಗವಾಗುವ ಯೋಜನೆಗಳನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಸಹಕಾರ ಸಂಘಗಳಲ್ಲಿ ಶೇರುದಾರರಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದವರ ಸದಸ್ಯತ್ವ ಮುಂದುವರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸದಸ್ಯತ್ವ ಮೊತ್ತ ಕಡಿಮೆ ಇದ್ದಲ್ಲಿ ಅದನ್ನು ಸರ್ಕಾರ ಭರಿಸಿ ಪೂರ್ಣ ಪ್ರಮಾಣದಲ್ಲಿ ಶೇರು ಸಿಗುವಂತೆ ಮಾಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಯುವ ಸದಸ್ಯರ ನೋಂದಣಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.