ಕೋಲ್ಕತ್ತಾ: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಪ್ರತಿಭಟನೆ ನಡೆಸಿದ್ದು, ಕಾಲೇಜು ಪ್ರಾಂಶುಪಾಲರು ರಾಜೀನಾಮೆ ನೀಡಿದ್ದಾರೆ.
ಕೋಲ್ಕತ್ತಾ ವೈದ್ಯಕೀಯ ಕಾಲೇಜು ಪಿಜಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಈ ನಡುವೆ ಆರ್.ಜೆ. ಕರ್ ಕಾಲೇಜು ಪ್ರಾಂಶುಪಾಲ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ.
ಆರ್.ಜಿ.ಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ ವಿವಿಧ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಏಮ್ಸ್ ವೈದ್ಯರೂ ಕೂಡ ಮುಷ್ಕರಕ್ಕೆ ಕೈಜೋಡಿಸಿದ್ದಾರೆ.
ಕೋಲ್ಕತ್ತಾ ಸರ್ಕಾರಿ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಶುಕ್ರವಾರ ದ್ವಿತೀಯ ವರ್ಷದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಈ ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ.