ನವದೆಹಲಿ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವಿರೋಧಿಸಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದನ್ನು ಖಂಡಿಸಿ ಆಗಸ್ಟ್ 17 ರಂದು ವೈದ್ಯರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಭಾರತೀಯ ವೈದ್ಯಕೀಯ ಸಂಘ(ಐಎಂಎ) ಆಗಸ್ಟ್ 17ರಂದು ಬೆಳಿಗ್ಗೆ 6 ರಿಂದ ಆಗಸ್ಟ್ 18ರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ವೈದ್ಯರು ರಾಷ್ಟ್ರವ್ಯಾಪಿ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ಘೋಷಿಸಿದೆ.
ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ತುರ್ತು ಚಿಕಿತ್ಸೆ ಅಗತ್ಯವಿರುವ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುವುದು. ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಐಎಂಎ ನೀಡಿದ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಒಪಿಡಿ ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗೋವಾದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ 1,000 ಕ್ಕೂ ಹೆಚ್ಚು ವೈದ್ಯರು ಆಗಸ್ಟ್ 17 ರ ಬೆಳಿಗ್ಗೆಯಿಂದ 24 ಗಂಟೆಗಳ ಕಾಲ ಹೊರರೋಗಿ ವಿಭಾಗ (OPD) ಸೇವೆಗಳಿಗೆ ಹಾಜರಾಗುವುದಿಲ್ಲ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಗೋವಾ ಶಾಖೆ) ಅಧ್ಯಕ್ಷ ಡಾ ಸಂದೇಶ್ ಚೋಡಂಕರ್ ತಿಳಿಸಿದ್ದಾರೆ.