
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.
ಗುರುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 13ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ಫೆಬ್ರವರಿ 13ರಂದು ಪ್ರಕಟಿಸಾಗಿತ್ತು.
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮುಖ್ಯ ಪರೀಕ್ಷೆಗೆ ತಡೆ ನೀಡಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಪ್ರಸ್ತುತ ಪ್ರಕರಣದಲ್ಲಿ ಅರ್ಹರಾದ ಅಭ್ಯರ್ಥಿಗಳಿಂದ ಮುಖ್ಯ ಪರೀಕ್ಷೆಗೆ ಅರ್ಜಿ ಸ್ವೀಕರಿಸಬಹುದು ಎಂದು ಕೆಎಟಿ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯಲ್ಲಿ 1:15 ಅನುಪಾತ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.