
ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಈ ಹಿಂದಿನ ನೇಮಕಾತಿಗೆ ಹೋಲಿಸಿದರೆ ಈ ಬಾರಿ ಶೇಕಡ 6.5 ರಷ್ಟು ಹೆಚ್ಚಳವಾಗಿದೆ. ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಸ್ಪಷ್ಟಪಡಿಸಿದೆ.
ಪೂರ್ವಭಾವಿ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿಯೂ ಅನೇಕ ದೋಷಗಳಿಂದಾಗಿ ಅನ್ಯಾಯವಾಗಿರುವುದರಿಂದ ಕನ್ನಡ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಶನಿವಾರ ಸ್ಪಷ್ಟನೆ ನೀಡಿದೆ. 2017-2018ರಲ್ಲಿ 106 ಹುದ್ದೆಗಳಿಗೆ 1:20 ಅನುಪಾತ ಮತ್ತು 2023 -24 ರಲ್ಲಿ 384 ಹುದ್ದೆಗಳಿಗೆ 1:15 ಅನುಪಾತದಲ್ಲಿ ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.
ಈ ವಿಷಯದ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ನು ನಡೆಸಿದ ನಂತರ ಈ ಬಾರಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಆಯ್ಕೆ ಅನುಪಾತ ಶೇಕಡ 6.5 ರಷ್ಟು ಹೆಚ್ಚಳವಾಗಿದೆ. ಆದ್ದರಿಂದ 2023 -24ನೇ ಸಾಲಿನಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿಲ್ಲವೆಂದು ಸ್ಪಷ್ಟಪಡಿಸಲಾಗಿದೆ.
ಆದರೆ, ಈ ಬಾರಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿರುವ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಒಟ್ಟು ಸಂಖ್ಯೆಯನ್ನು ಕೆಪಿಎಸ್ಸಿ ಬಿಡುಗಡೆ ಮಾಡಿಲ್ಲ ಎಂದು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.