ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) ಕಾರ್ಯದರ್ಶಿ ರಮಣದೀಪ್ ಚೌಧರಿ ತಿಳಿಸಿದ್ದಾರೆ.
ಈ ಬಗ್ಗೆ ನಡೆಸಲಾದ ಪ್ರಾಥಮಿಕ ವಿಚಾರಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎನ್ನುವ ಅಂಶ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಕೆಲುವು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಕೆಪಿಎಸ್ಸಿ ಸೂಚನೆ ನೀಡಿದ್ದು, ಜಿಲ್ಲಾಡಳಿತ ಪರೀಕ್ಷಾ ಕೇಂದ್ರದಲ್ಲಿನ ಎಲ್ಲಾ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ ವೇಳೆ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿರುವುದು ಕಂಡುಬಂದಿಲ್ಲ. ಆದರೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವಾಗ ಸ್ವಲ್ಪ ಗೊಂದಲ ಮಾಡಿಕೊಳ್ಳಲಾಗಿದೆ. ಹಾಗಾಗಿ ಪತ್ರಿಕೆಗಳ ದುರ್ಬಳಕೆ ಆಗಿರುವುದು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.