ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಹೊರಡಿಸಿದ ವಿವಿಧ ನೇಮಕಾತಿ ಅಧಿಸೂಚನೆಗಳನ್ನು ಒಳ ಮೀಸಲಾತಿ ಜಾರಿಯಾಗುವವರೆಗೆ ತಡೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಇತ್ತೀಚೆಗೆ ಗ್ರೂಪ್ ಎ ವೃಂದದ 159, ಗ್ರೂಪ್ ಬಿ ವೃಂದದ 225 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ, ಪಿಎಸ್ಐ ಮೊದಲಾದ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದ್ದು, ಈ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಬೇಕು. ಒಳ ಮೀಸಲಾತಿ ಜಾರಿಯಾದ ಬಳಿಕ ಮರು ಅಧಿಸೂಚನೆ ಹೊರಡಿಸಬೇಕು ಎಂದು ಆಂಜನೇಯ ಒತ್ತಾಯಿಸಿದ್ದಾರೆ.
15 ದಿನಗಳ ಒಳಗೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಸಚಿವರಾದ ಕೆ.ಹೆಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.