ಧಾರವಾಡ: ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ಹಿಂದಿನ ಬಿಜೆಪಿ ಸರ್ಕಾರ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಳಿಸಿತ್ತು. ಈ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು. ಕೃಷಿ ಭಾಗ್ಯ ಮತ್ತು ಕೃಷಿ ಯಂತ್ರಧಾರೆ ಯೋಜನೆಗಳ ಮರು ಜಾರಿ ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.
ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ. ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು 15 ಲಕ್ಷ ರೂ.ವರೆಗೆ ಕೇವಲ ಶೇ.3 ರಷ್ಟು ಬಡ್ಡಿ ನಿಗದಿಗೊಳಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.