ಬೆಂಗಳೂರು: ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಕಳೆದ ನಾಲ್ಕೂವರೆ ವರ್ಷದಿಂದ ಆಸ್ತಿ ಮಾರ್ಗಸೂಚಿ ದರ ಹೆಚ್ಚಳವಾಗದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಎರಡು ವರ್ಷಕ್ಕೊಮ್ಮೆ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗುತ್ತದೆ. ಮಾರುಕಟ್ಟೆಗೆ ದರಕ್ಕೆ ತಕ್ಕಂತೆ ಮಾರ್ಗ ಸೂಚಿ ದರ ಇರಬೇಕೆಂದು ಅಧಿಕಾರಿಗಳು ಹೇಳಿದ್ದು, ಶೀಘ್ರವೇ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಮಾರುಕಟ್ಟೆ ಬೆಲೆಗೂ ಮಾರ್ಗಸೂಚಿ ದರಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತದೆ. ಎಷ್ಟು ದರ ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ವಾರದೊಳಗೆ ಸಭೆ ನಡೆಸಿ ನಿರ್ಧರಿಸಲಾಗುವುದು. ಕಳೆದ ಆರ್ಥಿಕ ವರ್ಷದಲ್ಲಿ ಮಾರ್ಗಸೂಚಿ ದರದ ಮೇಲೆ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗಿತ್ತು. ಪ್ರಸ್ತುತ ಯಾವುದೇ ರಿಯಾಯಿತಿ ಇಲ್ಲದಿದ್ದರೂ 200 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ ಎಂದು ಹೇಳಿದ್ದಾರೆ.