ಬೆಂಗಳೂರು: ಮೇವಿನ ಕೊರತೆ ನೀಗಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ಗಳನ್ನು ಉಚಿತವಾಗಿ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಗೆ 20 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಮೇವಿನ ಕೊರತೆ ನಿವಾರಿಸುವ ಉದ್ದೇಶದಿಂದ ನೀರಿನ ಲಭ್ಯತೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ಗಳನ್ನು ಉಚಿತವಾಗಿ ನೀಡಲಾಗುವುದು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗಬಹುದಾದ ಪರಿಸ್ಥಿತಿ ಪರಾಮರ್ಶೆ ನಡೆಸಲು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯಕ್ಕೆ ಮೇವಿನ ಕೊರತೆ ಇಲ್ಲ. ಮುಂಜಾಗ್ರತೆ ಕ್ರಮವಾಗಿ ಮೇವು ಬಿತ್ತನೆ ಬೀಜ ಕಿಟ್ ಗಳನ್ನು ವಿತರಿಸಲಾಗುವುದು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.