
ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ಭೂಕಬಳಕೆ ಪ್ರಕರಣಗಳಲ್ಲಿ ಕ್ರಮ ವಹಿಸಲು ಪ್ರಸ್ತುತ ಜಾರಿಯಲ್ಲಿರುವ ಭೂ ಕಬಳಿಕೆ ನಿಷೇಧ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಹಾಲಿ ಇರುವ ಕಾನೂನನ್ನು ಸಮರ್ಪಕವಾಗಿ ಬಳಸಿಕೊಳ್ಳದ ಕಾರಣ ತೆರವು ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಕೆಲವು ಅಧಿಕಾರಿಗಳ ನಿರ್ಲಕ್ಷದಿಂದಲೂ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಕಾನೂನನ್ನು ಮತ್ತಷ್ಟು ಬಿಗಿ ಮಾಡಿ ಭೂಕಬಳಿಕೆ ತಡೆಯಲಾಗುವುದು. ಕಬಳಿಕೆ ಪಟ್ಟಿಯಿಂದ ರೈತರ ಜಮೀನು ಕೈಬಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೃಷಿ ಜಮೀನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಪ್ರಕರಣಗಳು ಹೆಚ್ಚಾಗಿ ಕೊಡಗು ಜಿಲ್ಲೆಯಲ್ಲಿ ಪರಿಸರದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಕೊಡಗಿಗೆ ಭೇಟಿ ನೀಡಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.