ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿರುವ ಬೆನ್ನಲ್ಲೇ ಮಂಡ್ಯ, ಚಮರಾಜನಗರ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.
ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದು, ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದ್ದಾರೆ. ಇನ್ನೊಂದೆಡೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಕ್ತ ಕೊಟ್ಟೆವು, ನೀರು ಬಿಡೆವು ಎಂದು ಘೋಷಣೆ ಕೂಗಿದ್ದಾರೆ. ರಾಜ್ಯದ ರೈತರ ಬೆಳೆಗಳಿಗೇ ನೀರಿಲ್ಲ, ಕುಡಿಯುವ ನೀರಿನ ಸಮಸ್ಯೆಯೂ ಉದ್ಭವವಾಗುತ್ತಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ಸರಿಯಿಲ್ಲ, ತಕ್ಷಣ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಇನ್ನಷ್ಟು ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.