ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಅವರನ್ನು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮತ್ತು ಮಾಜಿ ಶಾಸಕ ಗುರುಸಿದ್ದನಗೌಡ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿದ್ದ ಉಭಯ ನಾಯಕರು ಈಶ್ವರಪ್ಪ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಎಸ್.ಎ. ರವೀಂದ್ರನಾಥ್, ರೇಣುಕಾಚಾರ್ಯ, ಕರುಣಾಕರ ರೆಡ್ಡಿ ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಆದ ಬೆಳವಣಿಗೆಗಳ ಕುರಿತಾಗಿ ಈಶ್ವರಪ್ಪ ಮತ್ತು ರವೀಂದ್ರನಾಥ್ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.