ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಈಶ್ವರಪ್ಪ, ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿದ್ದ ಯಡಿಯೂರಪ್ಪ ನಮಗೆ ಮೋಸ ಮಾಡಿದ್ದಾರೆ. ಕಾಂತೇಶ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಹೇಳಿಕೆ ಕೇವಲ ಮೂಗಿಗೆ ತುಪ್ಪ ಸವರುವ ತಂತ್ರವಷ್ಟೇ. ಶೋಭಾ ಕರಂದ್ಲಾಜೆ ಅವರಿಗೆ ಕೇಳಿದಷ್ಟು ಗಟ್ಟಿಯಾಗಿ ನನ್ನ ಮಗನಿಗೆ ಯಾಕೆ ಯಡಿಯೂರಪ್ಪ ಟಿಕೆಟ್ ಕೇಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದುವರೆಗೂ ಯಡಿಯೂರಪ್ಪ ನನ್ನ ಜೊತೆಗೆ ಮಾತನಾಡಿಲ್ಲ. ಎಂಎಲ್ಸಿ ಪ್ರಸ್ತಾಪವನ್ನು ಮಾಡಿಲ್ಲ. ಅವರ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂದು ಬೆಂಬಲಿಗರು, ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ. ಎಲ್ಲಾ ಸಮಾಜದ ಪ್ರಮುಖ ಮುಖಂಡರು ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಯಡಿಯೂರಪ್ಪ ಮತ್ತು ಅವರ ಮಕ್ಕಳು ನಿಮಗೆ ಅನ್ಯಾಯ ಮಾಡಿದ್ದು, ನೀವು ಸ್ಪರ್ಧಿಸಬೇಕೆಂದು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಶುಕ್ರವಾರ ಸಂಜೆ 5 ಗಂಟೆಗೆ ಶಿವಮೊಗ್ಗದಲ್ಲಿ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಅಭಿಪ್ರಾಯ ಪಡೆದು ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.