ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ವರದಿ ಆಧರಿಸಿ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶನಿವಾರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ಪ್ರತಿವರ್ಷ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊರಬರುತ್ತಿದ್ದು, ಅವರಿಗೆ ವಿಶೇಷ ವ್ಯವಸ್ಥೆ ಜೊತೆಗೆ ಸರ್ಕಾರಿ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.