ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ. ನಿಗಮದ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರು ಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ ಎಂದರು.
ನಿಗಮದ ಸಮಸ್ತ ಸಿಬ್ಬಂದಿಗಳು 35,000, ಅದರಲ್ಲಿ ಒಟ್ಟು 8414 ಶಿಸ್ತು ಪ್ರಕರಣಗಳಿದ್ದು, ಕಳೆದ ಮೂರು ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತ ದಂಡ ಅಂದರೆ, ರೂ. 100, ರೂ. 200, ಗರಿಷ್ಠ ರೂ. 500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ವ್ಯವಸ್ಥಾಪಕ ನಿರ್ದೇಶಕರು, ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಂಡಿರುವ ನೌಕರರಿಗೆ ಆದೇಶದ ಪ್ರತಿಯನ್ನು ಸಿಹಿಯೊಂದಿಗೆ ವಿತರಿಸಿ ಶುಭ ಕೋರಿದರು.