ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿ 500 ಹೆಚ್ಚುವರಿ ಬಸ್ ಸಂಚಾರ ಆರಂಭಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಆ. 29, 30 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆಗಳಿಗೆ ಹೆಚ್ಚುವರಿಯಾಗಿ 500 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ರಾಜಾಜಿನಗರದ ನವರಂಗ್, ಬನಶಂಕರಿ, ವಿಜಯನಗರ, ಜೀವನ ಭಿಮಾನಗರ, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ ಮೊದಲಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ. ರಾಜ್ಯದ ವಿವಿಧ ಭಾಗಗಳಿಂದ ಹೊರ ರಾಜ್ಯ ಪ್ರಮುಖ ನಗರಗಳಿಂದ ಆಗಸ್ಟ್ 31ರಂದು ಬೆಂಗಳೂರಿಗೆ ವಿಶೇಷ ಬಸ್ ಗಳು ಮರಳಲಿವೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯಿರಿಸಿದರೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಗಳನ್ನು ಒಟ್ಟಿಗೆ ಕಾಯ್ದಿರಿಸಿದರಲ್ಲಿ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.