ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ನೆಹರು ಅವರ 135 ನೇ ಜಯಂತಿ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲೆ ಮಕ್ಕಳೊಂದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ ನೀಡಿದ್ದಾರೆ.
ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಚರಣ್, ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಸಾರಿಗೆ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಇದರಿಂದ ನಮ್ಮ ಅಕ್ಕ, ತಾಯಿ, ತಂಗಿಯರು, ಸ್ನೇಹಿತೆಯರಿಗೆ ಅನುಕೂಲವಾಗುತ್ತಿದೆ. ಗಂಡು ಮಕ್ಕಳಿಗೆ ಕೂಡ ಉಚಿತ ಪ್ರಯಾಣದ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ., ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಗೃಹತ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಶಕ್ತಿ ಯೋಜನೆಯಡಿ ಒಂದು ವಯೋಮಾನದವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.