ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಭುಗಿಲೆದ್ದ ಬೆನ್ನಲ್ಲೇ ಬಸ್ ಸಂಚಾರಗಳಿಲ್ಲದೇ ಪರದಾಡುತ್ತಿರುವ ಸಾರ್ವಜನಿಕರ ಆಕ್ರೋಶ ಕೂಡ ತೀವ್ರಗೊಂಡಿದ್ದು, ಈ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ, ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ವಿರಳವಾಗಿ ಓಡಾಡುತ್ತಿವೆ. ಈ ನಡುವೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಕೋರ್ಟ್ ಬಳಿ ನಡೆದಿದೆ.
ಗಾಣಗಾಪುರದಿಂದ ಕಲಬುರಗಿ ನಗರಕ್ಕೆ ಬರುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಸ್ ನ ಗಾಜುಗಳು ಪುಡಿ ಪುಡಿಯಾಗಿವೆ. ಇನ್ನೊಂದೆಡೆ ಬೆಂಗಳೂರಿನ ನೆಲಮಂಗಲ ಬಳಿ ಕೂಡ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.