ಬೆಳಗಾವಿ(ಸುವರ್ಣಸೌಧ): ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಸಂಚಾರ ಮಿತಿಯನ್ನು 100 ಕಿಲೋಮೀಟರ್ಗೆ ಹೆಚ್ಚಳ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ.
ಜೆಡಿಎಸ್ ಸದಸ್ಯ ಹೆಚ್.ಕೆ. ಕುಮಾರಸ್ವಾಮಿಯವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಶ್ರೀರಾಮುಲು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಹಾಲಿ 60 ಕಿಲೋ ಮೀಟರ್ವರೆಗೆ ವಿದ್ಯಾರ್ಥಿಗಳು ಬಸ್ ಪಾಸ್ ತೋರಿಸಿ ಪ್ರಯಾಣಿಸಬಹುದಾಗಿದೆ. ಇದನ್ನು 100 ಕಿಲೋಮೀಟರ್ ಹೆಚ್ಚಳ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲೆ ನೀಡಿ ಸೇವಾ ಸಿಂಧು ಮೂಲಕ ಬಸ್ ಪಾಸ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ ಅವರು, ಸಾರಿಗೆ ಸಂಸ್ಥೆಯನ್ನು ಲಾಭದಾಯಕವಾಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.