ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ.
ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿಂದೆ 2019ರಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ತೈಲ ಬೆಲೆ ಏರಿಕೆ ಆಗಿರುವುದರಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. ನೌಕರರಿಗೆ ಸಂಬಳ ಹೆಚ್ಚಳ, ಸೌಲಭ್ಯ ಕಲ್ಪಿಸಲು ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ 2020ರಲ್ಲಿಯೇ ಆಗಬೇಕಿತ್ತು ಎಂದು ತಿಳಿಸಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ ಕೆಎಸ್‌ಆರ್‌ಟಿಸಿಗೆ 295 ಕೋಟಿ ರೂಪಾಯಿ ನಷ್ಟವಾಗಿದೆ. 40 ಹೊಸ ವೋಲ್ವೋ ಬಸ್ ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ 600 ಸಾಮಾನ್ಯ ಬಸ್ ಗಳನ್ನು ಖರೀದಿ ಮಾಡಲಾಗಿದೆ. ಕೆಎಸ್ಆರ್ಟಿಸಿ ಸಂಸ್ಥೆ ಉಳಿಯಬೇಕಾದರೆ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಿದ್ದಾರೆ.