ಮಾಜಿ ಸಚಿವ ಕುಮಾರ್ ಬಂಗಾರಪ್ಪ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಪರಾಭವಗೊಂಡ ಬಳಿಕ ಕುಮಾರ್ ಬಂಗಾರಪ್ಪ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದೆ. ಬಿಜೆಪಿಯಲ್ಲೇ ಉಳಿದುಕೊಳ್ಳಬೇಕೆ ಅಥವಾ ಕಾಂಗ್ರೆಸ್ ಸೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆ ಎಂಬ ಬಗ್ಗೆ ಕುಮಾರ್ ಬಂಗಾರಪ್ಪ ಆಪ್ತ ವಲಯದಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಯಾವುದೇ ಕಾರಣಕ್ಕೂ ಬಿಜೆಪಿ ಬಿಡದಂತೆ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಹೊರತಾಗಿ ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ. ಒಂದು ವೇಳೆ ಉತ್ತರಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತರೂ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರಕ್ಕೆ ತಮ್ಮನ್ನು ಪರಿಗಣಿಸಬೇಕೆಂದು ಕುಮಾರ್ ಬಂಗಾರಪ್ಪ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.
ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೇಜ್ ನಲ್ಲಿ ಎರಡು ಬಾರಿ ಡಿಪಿ ಬದಲಿಸಿದ್ದು, ಅವರ ಬೆಂಬಲಿಗರು, ಅಭಿಮಾನಿಗಳಲ್ಲಿ ಸಂಭ್ರಮ ಉಂಟು ಮಾಡಿದೆ. ತಂದೆ ಬಂಗಾರಪ್ಪ ಅವರೊಂದಿಗೆ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಫೋಟೋ ಹಾಕಿಕೊಂಡಿದ್ದ ಕುಮಾರ್ ಬಂಗಾರಪ್ಪ ನಂತರ ತಂದೆ, ತಾಯಿ, ಪತ್ನಿ, ಮಕ್ಕಳೊಂದಿಗೆ ಇರುವ ಕುಟುಂಬದ ಫೋಟೋ ಪೋಸ್ಟ್ ಮಾಡಿದ್ದಾರೆ.
ಇದಕ್ಕೆ ಅಭಿಮಾನಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ಗೆ ಬನ್ನಿ ಅಖಾಡ ನಿಮ್ಮದೇ ಎಂದು ಬೆಂಬಲಿಗರು ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೆ ಕೆಲವರು ಚುನಾವಣೆಯಲ್ಲಿ ಸೋಲು ಗೆಲುವು ಸಹಜ ಎಂದು ತಿಳಿಸಿದ್ದಾರೆ.
ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರಿದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಲ್ಲಿ ಉಳಿದರೆ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಪರಾಭವಗೊಂಡಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಸ್ಪರ್ಧಿಸಲಿದ್ದು, ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವೇಳೆ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರಿ ಸ್ಪರ್ಧಿಸಿದಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ಅಖಾಡ ರಂಗೇರಲಿದೆ.