ಜೈಪುರ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷದಿಂದಾಗಿಯೇ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ರಾಜ್ಯ ಆಡಳಿತ ಸೇವೆಯ ಮಹಿಳಾ ಅಧಿಕಾರಿ ಪ್ರಿಯಾಂಕಾ ಬಿಷ್ಣೋಯ್ (35), ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಆದರೆ ಶಸ್ತ್ರಚಿಕಿತ್ಸೆ ಬಳಿಕ ಸಾವನ್ನಪ್ಪಿದ್ದು, ವೈದ್ಯರ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿದೆ ಎನ್ನಲಾಗಿದೆ.
ಪ್ರಿಯಾಂಕಾ ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾಗಿತ್ತು. ಬುಧವಾರ ಅವರನ್ನು ಅಹಮದಾಬಾದ್ ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಿಯಾಂಕಾ ಕೊನೆಯುಸಿರೆಳೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರಿಯಾಂಕಾ ಕುಟುಂಬದವರು ಏಮ್ಸ್ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರತಿಭಟನೆಯನ್ನು ಕೈಬಿಡಲಾಗಿದೆ.