ಬೆಳಗಾವಿ: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 3778 ಕೆರೆಗಳಿದ್ದು, 108 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಈ ವರ್ಷ ಉತ್ತಮ ಮಳೆಯಾಗಿದ್ದು, 88.47 ಟಿಎಂಸಿಯಷ್ಟು ನೀರು ತುಂಬಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಗಳ ಪರಿವೀಕ್ಷಣೆ ಕೈಗೊಂಡು, ಕೆರೆಗಳ ಏರಿ, ಕೋಡಿ, ತೂಬು ಸೇರಿದಂತೆ ಇತ್ಯಾದಿಗಳನ್ನು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಂಡು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3,778 ಕೆರೆಗಳಿದ್ದು, ಅತೀ ಮಳೆಯಿಂದ ಕೆರೆಗಳ ಏರಿ ಹಾನಿಯಾದ ಸಂದರ್ಭದಲ್ಲಿ ತುರ್ತು ಸಂರಕ್ಷಣೆಗೆ ಕ್ರಮ ಜರುಗಿಸಲಾಗಿದೆ. 2023-24ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 210 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 29.12 ಕೋಟಿ ರೂ. ವೆಚ್ಚ ಮಾಡಲಾಗಿದೆ. 2022-23 ರಲ್ಲಿ 638 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 156 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.