ನಾವು ಮುಂಬೈ ಕರ್ನಾಟಕದವರಾಗಿದ್ದು, ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದರು.
ಅವರು ನೀಡಿದ ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ ಎಂದು ತಿಳಿಸಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷಿಕ ಪ್ರದೇಶಗಳನ್ನು ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದರಿಂದ ಲಕ್ಷ್ಮಣ ಸವದಿ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಇಂತಹ ಹೇಳಿಕೆ ನೀಡಿದ್ದಾರೆ. ಮುಂಬೈ ಎಂದಿಗೂ ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿರುತ್ತದೆ. ಅದನ್ನು ಬದಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಎನ್.ಸಿ.ಪಿ. ವಕ್ತಾರ ಮಹೇಶ್ ತಾಪಸೆ ಮಾತನಾಡಿ, ಲಕ್ಷ್ಮಣ್ ಸವದಿ ಹೇಳಿಕೆಯ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಶಿವಸೇನೆ ಮುಖಂಡ ಸಂಜಯ್ ರಾವುತ್, ಲಕ್ಷ್ಮಣ ಸವದಿ ಮೊದಲು ಇತಿಹಾಸ ತಿಳಿದುಕೊಳ್ಳಲಿ. ಮರಾಠಿ ಭಾಷಿಕರಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.