ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ನೀಡಲಾಗುವುದು. ಅಂಗನವಾಡಿ ಹೆಸರು ಬದಲಾವಣಗೆ ಚಿಂತನೆ ನಡೆದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಕಾರ್ಯಕರ್ತರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಸಚಿವರು ಮಾತನಾಡಿ, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ. ಮಾಂಟೆಸ್ಸರಿ ತರಗತಿಗಳು ಆರಂಭವಾದ ನಂತರ ಅಂಗನವಾಡಿ ಹೆಸರನ್ನು ಬದಲಾಯಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ರಾಜ್ಯದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಈಗಾಗಲೇ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕರ್ತೆಯರಿಗೆ ಯಾವುದೇ ಆತಂಕ ಬೇಡ. ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಕರ್ನಾಟಕ ಪಬ್ಲಿಕ್ ಸ್ಕೂಲ್, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.