ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃಣಾಲ್ ಪರವಾಗಿ ಪ್ರಚಾರ ನಡೆಸುವಂತೆ ತಮ್ಮ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿದ ದೂರಿನ ಮೇರೆಗೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದೆ.
ಬುಧವಾರ ಬೆಳಗ್ಗೆ ಸಚಿವರ ಗೃಹ ಕಚೇರಿಯಲ್ಲಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸೇರಿದ್ದನ್ನು ಪರಿಶೀಲಿಸಿದ ಫ್ಲೈಯಿಂಗ್ ಸ್ಕ್ವಾಡ್ ವಿಡಿಯೋ ಚಿತ್ರೀಕರಣ ಮಾಡಿದೆ. ನಂತರ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿದ್ದು, ಅನುಮತಿ ದೊರೆತ ಕೂಡಲೇ ಮುಂದಿನ ಕ್ರಮ ಕೈಗೊಳ್ಳುವುದಾಗಿ ಚುನಾವಣಾಧಿಕಾರಿಗಳು ಹೇಳಿದ್ದಾರೆ. ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಈ ಬಗ್ಗೆ ಮನವಿ ಮಾಡಲು ಆಗಮಿಸಿದ್ದರು. ನಾನೇ ಅವರಿಗೆ ತಿಳಿಹೇಳಿ ಕೆಲಸ ಮಾಡಲು ಸೂಚಿಸಿದ್ದೇನೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಸಭೆ ನಡೆಸಿಲ್ಲವೆಂದು ತಿಳಿಸಿದ್ದಾರೆ.