ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಿಲುಕಿದ್ದಾರೆ. ಡಿನೋಟಿಫೈ ಹಗರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಲುಕಿದ್ದಾರೆ. ಮೊದಲು ಇವರು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆಗೂ ಮುನ್ನ ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಗಿಮಿಕ್ ಎಂದು ಲೇವಡಿ ಮಾಡಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಈಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.