
ಬೆಂಗಳೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೇಳಿಬಂದಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಿಕ್ಷಕನೊಬ್ಬ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ ಎಂದರು.
ಈ ಪ್ರಕರಣದಲ್ಲಿ ದೂರು ದಾಖಲಾಗಿರುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಈ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆ ತಿಳಿಸಲಾಗಿದೆ. ಲೈಂಗಿಕ ದೌರ್ಜನ್ಯವೆಸಗಿರುವ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೆಚ್. ಡಿ. ಕೋಟೆ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕೆ.ಹೆಚ್ ಗಿರೀಶ್ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ.