ಹಾವೇರಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಹಾವೇರಿ ಜಿಲ್ಲೆ ಸಾಂವಸಗಿ ಗ್ರಾಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆ ವೇಳೆ ನನ್ನ ವಿರುದ್ಧ ಏನೇನೋ ಮಾತನಾಡಿ, ಚುನಾವಣೆಯಲ್ಲಿ ಸೋಲಿಸಲು ಯತ್ನಿಸಿದ್ರು. ಪ್ರತಿಯೊಬ್ಬ ಮತದಾರರಿಗೂ 5000 ರೂಪಾಯಿ ಕೊಟ್ಟು ಮತ ಪಡೆಯುತ್ತೇನೆ ಎಂದರು. ಆದರೆ ಅದ್ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳದೇ ಚುನಾವಣೆಯನ್ನು ಎದುರಿಸಿದೆ ಎಂದು ರಮೇಶ್ ಜಾರಕಿಹೊಳಿ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.
ಮತದಾರರಿಗೆ ಹಣದ ಆಮಿಷ ಒಡ್ಡಿದವರಿಗೆ ಜನ ತಕ್ಕ ಉತ್ತರ ನೀಡಿ ನನ್ನನ್ನು ಗೆಲ್ಲಿಸಿದ್ದಾರೆ. ಇಂದು ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ನಾನು ಮಂತ್ರಿ ಆಗಿದ್ದೇನೆ. ಜನತೆ ನಮ್ಮ ಜೊತೆ ಇರುವವರೆಗೂ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೇ ಸಾಕ್ಷಿ ಎಂದು ಟಾಂಗ್ ನೀಡಿದ್ದಾರೆ.
ಇದೇ ವೇಳೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಈ ನಿಟ್ಟಿನಲ್ಲಿ ನಾನೂ ಹೋರಾಟ ಮಾಡುತ್ತಿದ್ದೇನೆ. ಬಿಜೆಪಿ ಸರ್ಕಾರ ಇದ್ದಾಗ ಬೇರೆ, ಈಗ ಬೇರೆ ಎಂದೇನೂ ಇಲ್ಲ. ಅಂದು ಇಂದು ನಾನು ಪಂಚಮಸಾಲಿ ಪರವಾಗಿಯೇ ಇದ್ದೇನೆ. ಇಂದಿಗೂ ಪಂಚಮಸಾಲಿ ಹೋರಾಟದ ಪರವಾಗಿ ಮಾತನಾಡುತ್ತೇನೆ ಎಂದು ಹೇಳಿದರು.