ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಕಿತ್ತೂರು ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಗಂಭಿರವಾಗಿ ಗಾಯಗೊಂಡಿದ್ದು, ಸಹೋದರ ಚನ್ನರಾಜ ಹಟ್ಟಿಹೊಳಿಗೆ ತಲೆಯ ಭಾಗದಲ್ಲಿ ಗಾಯಗಳಾಗಿವೆ. ಇಬ್ಬರೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕೂಡ ಪಕ್ಷ ಬೇಧ ಮರೆತು ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಣಿ ಕರೆ ಮಾಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ.
ಸಂಪುಟ ಸಹೋದ್ಯೋಗಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿಯೂ ಬರೆದುಕೊಂಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಕೂಡ ದೂರವಾಣಿ ಕರೆ ಮಾಡಿ ಸಚಿವರ ಹಾಗೂ ಪರಿಷತ್ ಸದಸ್ಯರ ಆರೋಗ್ಯ ವಿಚಾರಿಸಿದ್ದಾರೆ. ಬೇಗನೇ ಗುಣಮುಖರಾಗುವಂತೆ ಹಾರೈಸಿದ್ದಾರೆ.