ಬೆಂಗಳೂರು: ಭೂ ಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಅಥವಾ ಭೂ ಪರಿವರ್ತನಾ ವಿಧೇಯಕದಲ್ಲಿ ಕೃಷಿಯೇತರ ಉದ್ದೇಶಗಳಿಗಾಗಿ ಮಾಡಲಾಗಿರುವ ಭೂಮಿಯನ್ನು ಉಲ್ಲೇಖಿಸಿರುವ ಉದ್ದೇಶಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿರುವುದಿಲ್ಲ.
ಯಾವುದೇ ಮಾಸ್ಟರ್ ಪ್ಲಾನ್ ಇಲ್ಲದೇ ಸ್ಥಳೀಯ ಯೋಜನಾ ಪ್ರದೇಶದ ಹೊರಗಿನ ಭೂಮಿಯನ್ನು ಪರಿವರ್ತನೆ ಮಾಡಿಕೊಳ್ಳಲು ಅರ್ಜಿದಾರರು ಅಫಡಿವಟ್ ಸಲ್ಲಿಸಬೇಕಾಗುತ್ತದೆ. ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ಆದೇಶವನ್ನು ನೀಡದಿದ್ದರೆ ಭೂ ಪರಿವರ್ತನೆಯನ್ನು ಅನುಮೋದಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಆಡಳಿತದಲ್ಲಿನ ವಿಳಂಬ ಹಾಗೂ ಜನರ ಸುಲಿಗೆ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ.