ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರಸ್ತೆ ಸಂಪರ್ಕವೇ ಸಂಪೂರ್ಣ ಕಡಿತಗೊಂಡಿದೆ.
ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವುಂಟಾಗಿದ್ದು, ರಸ್ತೆಗಳ ಮೇಲೆ ಬೃಹತ್ ಬಂಡೆ, ಮಣ್ಣು, ಮರಗಳು ಬಿದ್ದಿವೆ. ಇದರಿಂದಾಗಿ ರಸ್ತೆ ಸಂಚಾರ ಬಂದ್ ಆಗಿದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಕುಸಿತ ಸಂಭವಿಸಿದೆ. ಇದೇ ರೀತಿ ಮಳೆ ಮುಂದುವರಿದರೆ ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಇನ್ನಷ್ಟು ಕಡೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ದತ್ತಪೀಠಕ್ಕೆ ನಿರ್ಬಂಧ ವಿಧಿಸಲಾಗಿದೆ.