ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಭಾರಿ ಮಳೆಯಿಂದ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಣ್ಣು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು ವಿಳಂಬವಾಗಿದೆ.