ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸಿದವರಿಗಷ್ಟೇ ಭವಿಷ್ಯದಲ್ಲಿ ಸ್ಥಾನಮಾನ, ಅಧಿಕಾರ ಸಿಗಲಿದೆ ಎಂದು ಪಕ್ಷದ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ವೇಳೆ ಉಸ್ತುವಾರಿ ಸಚಿವರು, ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ಕೊಡಿಸುವಂತೆ ತಿಳಿಸಲಾಗಿದೆ. ಲೀಡ್ ಕೊಡಿಸಿದವರಿಗೆ ಭವಿಷ್ಯದಲ್ಲಿ ಸ್ಥಾನಮಾನ ಅಧಿಕಾರ ಲಭಿಸಲಿದೆ ಎಂದು ಹೇಳಲಾಗಿದೆ.
ಶುಕ್ರವಾರ ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಿದ್ದತೆಗೆ ಸಂಬಂಧಿಸಿದಂತೆ ಸರಣಿ ಸಭೆ ನಡೆಸಿದ್ದಾರೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗೆ ಸಿಗುವ ಮತಗಳ ಆಧಾರದ ಮೇಲೆ ಸಚಿವ ಸ್ಥಾನ ಭದ್ರವಾಗಿರುತ್ತದೆ. ಶಾಸಕರಿಗೆ ಸರ್ಕಾರದಲ್ಲಿ ಪಕ್ಷದಲ್ಲಿ ಅವಕಾಶಗಳು ಸಿಗಲಿವೆ. ಕಳೆದ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಪಡೆದಿದ್ದ ಮತಗಳನ್ನು ಪಕ್ಷದ ಅಭ್ಯರ್ಥಿಗಳಿಗೆ ಕೊಡಿಸುವ ಟಾಸ್ಕ್, ಲೀಡ್ ಕೊಡಿಸಿದರಷ್ಟೇ ಅಧಿಕಾರ ಎಂದು ಎಚ್ಚರಿಕೆ ನೀಡಲಾಗಿದೆ.