ಬೆಂಗಳೂರು: ರಾಜ್ಯವೂ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೆ ಅಲೆಯಿಂದ ಜನ ತತ್ತರಿಸಿಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಆದರೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಇತರೆ ಹಿರಿಯ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಭೇಟಿಯ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿತ್ತು.
ಆದರೆ, ಇದನ್ನು ಸಂಪೂರ್ಣವಾಗಿ ಅಲ್ಲಗಳೆಯಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವರಿಷ್ಠರು ಚಿಂತನೆ ನಡೆಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಅಮಿತ್ ಶಾ ಭೇಟಿಯ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ಸ್ಪಷ್ಟಪಡಿಸಿದ್ದಾರೆ. ಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಿದ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿ ವರಿಷ್ಠರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಂತಹ ರಿಸ್ಕ್ ತೆಗೆದುಕೊಳ್ಳುವ ಸಾಧ್ಯತೆ ಇಲ್ಲವೆನ್ನಲಾಗಿದೆ.