ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ.
ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು. ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಶಿಕ್ಷಣಕ್ಷೇತ್ರ ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯರು ಮತ್ತು ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂತಿರುಗಬೇಕು ಎಂದು ಮನವಿ ಮಾಡಿದ್ದಾರೆ.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ. ಸಂಕನೂರ್, ಅರುಣ ಶಹಾಪುರ, ಶ್ರೀಕಂಠೇಗೌಡ, ಹನುಮಂತ ನಿರಾಣಿ, ಭೋಜೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರೆಸಲು ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆನ್ನಲಾಗಿದೆ.