ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮತ್ತು ಗೌರವ ಸಂಭಾವನೆಯನ್ನು 9 ಸಾವಿರ ರೂಪಾಯಿಯಿಂದ 15,000 ರೂ.ಗೆ ಹೆಚ್ಚಳ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಸಾಲಿನಲ್ಲಿ 3500ಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕೋರಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದು, ಇದನ್ನು ಆರ್ಥಿಕ ಇಲಾಖೆಗೆ ರವಾನಿಸಲಾಗಿದೆ. ವಾರದೊಳಗೆ ಇದಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.