ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ.
ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 ಗೇಟ್ ಗಳ ಮೂಲಕ ನೀರು ಹರಿಸಲಾಗಿದೆ. 1819 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯ ಈಗಾಗಲೇ 1814 ಅಡಿ ಭರ್ತಿಯಾಗಿದ್ದು, ಒಳ ಅರಿವು 5361 ಕ್ಯೂಸೆಕ್ ಇರುವ ಹಿನ್ನೆಲೆಯಲ್ಲಿ ನೀರಾವರಿ ಅಧಿಕಾರಿಗಳು ನೀರು ಹರಿಸಿದ್ದಾರೆ.
ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಶಾಸಕರಾದ ಬೇಳೂರು ಗೋಪಾಲಕೃಷ್ಣ ಗೇಟ್ ಗಳಿಗೆ ಪೂಜೆ ಸಲ್ಲಿಸಿ ನೀರು ಬಿಡುಗಡೆಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟಿರುವುದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತ ಮೈದುಂಬಿದೆ.