ಹಾಸನ: ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅರಸೀಕೆರೆ ತಾಲೂಕು ಘಟಕದ ಅಧ್ಯಕ್ಷ ಕ್ಯಾತನಹಳ್ಳಿ ಕೆ.ಎಸ್. ಶಿವಾನಂದಪ್ಪ ತಿಳಿಸಿದ್ದಾರೆ.
ಅರಸೀಕೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮನವಿ ಮಾಡಿದ್ದರೂ ಇದುವರೆಗೆ ಬೇಡಿಕೆಗಳನ್ನು ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 13 ರಂದು ಬೆಳಗಾವಿಗೆ ತೆರಳಿ 14ರಂದು ಪ್ರತಿಭಟನೆ ನಡೆಸಲಾಗುವುದು. ನಂತರ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಮದ್ಯಪಾನ ಪ್ರಿಯರ ಹೋರಾಟ ಸಂಘದ ರಾಜ್ಯ ಘಟಕದ ಖಜಾಂಚಿ ಮಧು ಮಾತನಾಡಿ, ಮದ್ಯಪಾನ ಪ್ರಿಯರ ಕಲ್ಯಾಣ ಮಂಡಳಿ ಸ್ಥಾಪಿಸಬೇಕು. ಅನಾರೋಗ್ಯಕ್ಕೆ ತುತ್ತಾದಲ್ಲಿ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ವಸತಿ ಇಲ್ಲದವರಿಗೆ ವಸತಿ ಸೌಲಭ್ಯ, ಮೃತಪಟ್ಟಲ್ಲಿ 10 ಲಕ್ಷ ರೂ. ವಿಮೆ ಸೌಲಭ್ಯ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಸಂಘದ ಸದಸ್ಯ ಹರಳಕಟ್ಟೆ ರೇಣುಕಪ್ಪ ಮಾತನಾಡಿ, ಕುಡುಕ ಎಂಬ ಪದವನ್ನು ಕೈಬಿಡಬೇಕು. ಮದ್ಯ ಖರೀದಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.