
ಬೆಂಗಳೂರು: ಮೇ 10 ರಂದು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ.
ರಾಜ್ಯದಲ್ಲಿ ಸಭೆ, ಸಮಾರಂಭ, ಉತ್ಸವ, ರ್ಯಾಲಿಗಳಿಗೆ ನಿರ್ಬಂಧ ಹೇರಲಾಗಿದೆ. ಅಭ್ಯರ್ಥಿ ಹೊರತುಪಡಿಸಿ ಬೇರೆ ಕ್ಷೇತ್ರದ ವ್ಯಕ್ತಿಗಳು ಇರುವಂತಿಲ್ಲ. ಯಾವುದೇ ಧ್ವನಿವರ್ಧಕಗಳ ಬಳಕೆಗೆ ಅವಕಾಶವಿಲ್ಲ. ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅಭ್ಯರ್ಥಿಗಳಿಗೆ ಅವಕಾಶವಿದೆ. ಅಭ್ಯರ್ಥಿ ಸೇರಿ ಆರು ಜನರಿಗೆ ಮಾತ್ರ ಮನೆಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.
ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ಕಾರ್ಯಕರ್ತರು ಮನೆ ಮನೆ ಪ್ರಚಾರ ನಡೆಸಿದ್ದಾರೆ. ಇಂದು, ನಾಳೆ ಹಣದ ಹೊಳೆಯ ಹರಿಯಲಿದೆ ಎನ್ನಲಾಗಿದೆ.
ಮದ್ಯ ಮಾರಾಟ ನಿಷೇಧ:
ರಾಜ್ಯಾದ್ಯಂತ ಮೇ 10 ಮಧ್ಯ ರಾತ್ರಿಯವರೆಗೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 13ರಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಬಂದ್ ಆಗಿರುತ್ತದೆ.