
ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳಿಗೆ ಅನುಮತಿ ನೀಡದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೆದ್ದಾರಿಗಳಿಂದ 500 ಮೀಟರ್ ದೂರದಲ್ಲಿ ಮದ್ಯ ಮಾರಾಟ ನಿಷೇಧಿಸಿ 2016ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಹೆದ್ದಾರಿ ಬದಿಯಲ್ಲಿ ಮದ್ಯದಂಗಡಿಗಳು ಮದ್ಯಪ್ರಿಯರಿಗೆ ಪ್ರಚೋದನೆ ನೀಡಲಿವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತವಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೊರ ಅಂಚಿನಿಂದ 500 ಮೀಟರ್ ದೂರದಲ್ಲಿ ಅಥವಾ ಹೆದ್ದಾರಿಯ ಉದ್ದಕ್ಕೂ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
20,000 ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳ ಸಂದರ್ಭದಲ್ಲಿ 500 ಮೀಟರ್‌ಗಳ ಅಂತರವನ್ನು 220 ಮೀಟರ್‌ಗೆ ಇಳಿಸಿ ಆದೇಶ ಹೊರಡಿಸಿದೆ. ಈ ಮೂಲಕ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದೆ.
ಸುಪ್ರೀಂ ಕೋರ್ಟ್‌ನ ಆದೇಶದಂತೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಡಾಳಿತ ಪ್ರದೇಶಗಳು ಕಾಲಕಾಲಕ್ಕೆ ಆದೇಶ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.