ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಹೊಸ ಮದ್ಯದ ಅಂಗಡಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಪರವಾನಿಗೆ ನೀಡುವ ಸಂಬಂಧ ಪರಿಶೀಲನೆ ನಡೆಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡಲು ಅವಕಾಶವಿದೆ. ಆದರೆ, ಸದ್ಯಕ್ಕೆ ಹೊಸ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕಿರಾಣಿ ಅಂಗಡಿಗಳಲ್ಲಿಯೂ ಮದ್ಯ ಮಾರಾಟ ನಡೆಯುತ್ತಿದೆ. ಎಂಎಸ್ಐಎಲ್ ಮಳಿಗೆಗಳಲ್ಲಿ ಮದ್ಯ ಖರೀದಿಸಿ ರಸ್ತೆಗಳಲ್ಲಿಯೇ ಮದ್ಯ ಸೇವಿಸುವ ಪ್ರಕರಣಗಳು ಎಲ್ಲೆಡೆ ಕಂಡುಬರುತ್ತವೆ. ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವುದಾಗಿ ಹೇಳಿದ್ದಾರೆ.