ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ಬರಗಾಲ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ ಎಂದು ಟೀಕಿಸಿದ್ದಾರೆ.
ಸರ್ಕಾರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು. ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ತಕ್ಷಣ 10,000 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರ್ಕಾರ ಅಸಡ್ಡೆ ತೋರಿಸುತ್ತಿದೆ ಎಂದು ಟೇಕಿಸಿದ ಕುಮಾರಸ್ವಾಮಿ, ಕಳೆದ ಆರು ತಿಂಗಳಿಂದ ಕೇವಲ ಗ್ಯಾರಂಟಿಗಳ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗೆ ಬರೆ ಎಳೆಯುತ್ತಿದೆ. ಬೆಳೆ ನಾಶದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಮನ್ನಾ ಮಾಡಬೇಕು. ಈ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.