
ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8 ರಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿರುವ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕ ಅದಾಲತ್ ನಲ್ಲಿ ರಾಜಿ ಮಾಡಿಕೊಳ್ಳಬಹುದಾದ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್ ಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಕೇಸ್, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಕೇಸ್ ಗಳು, ಚೆಕ್ ಬೌನ್ಸ್ ಪ್ರಕರಣಗಳು, ವಿಚ್ಛೇದನ ಹೊರತುಪಡಿಸಿದ ವೈವಾಹಿಕ, ಕೌಟುಂಬಿಕ ಪ್ರಕರಣ ಸೇರಿ ರಾಜಿಯಾಗಬಲ್ಲ ಪ್ರಕರಣಗಳನ್ನು ಲೋಕ ಅದಾಲತ್ ನಲ್ಲಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.