ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಚ್ 7, 8ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಮೊದಲ ಪಟ್ಟಿಯಲ್ಲಿಯೇ ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಜ್ಯದ 20ಕ್ಕೂ ಅಧಿಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಸ್ಕ್ರೀನಿಂಗ್ ಕಮಿಟಿ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಿದ್ದು, ಕೇಂದ್ರ ಚುನಾವಣಾ ಸಮಿತಿ ಅನುಮೋದನೆಯಷ್ಟೇ ಬಾಕಿ ಇದೆ.
ಪ್ರಮುಖವಾಗಿ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಎನ್.ಎ. ಹ್ಯಾರಿಸ್, ಕಲಬುರಗಿ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ, ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್, ತುಮಕೂರಿಗೆ ಮುದ್ದಹನುಮೇಗೌಡ, ಬೆಂಗಳೂರು ಗ್ರಾಮಾಂತರ ಡಿ.ಕೆ. ಸುರೇಶ್, ಮೈಸೂರಿಗೆ ಲಕ್ಷ್ಮಣ್, ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ, ಕೋಲಾರ ಕ್ಷೇತ್ರಕ್ಕೆ ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.