ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 6ಗಂಟೆವರೆಗೆ ಮತದಾನ ನಡೆಯಲಿದ್ದು, ಸುದೀರ್ಘ ಎರಡು ತಿಂಗಳ ಕಾಲ ನಡೆದ ಲೋಕಸಭಾ ಚುನಾವಣೆ ಪ್ರಕ್ರಿಯೆಗೆ ತೆರೆ ಬೀಳಲಿದೆ. ಜೂನ್ 4ರಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.
ಕೊನೆಯ ಹಂತದಲ್ಲಿ 8 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 904 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಲೋಕಸಭೆ ಚುನಾವಣೆಯ ಜೊತೆಗೆ ಒಡಿಶಾ ವಿಧಾನಸಭೆಯ 42 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. 1.09 ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 10.06 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಚಂಡೀಗಢದಲ್ಲಿ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಮಿಸಾ ಭಾರತಿ, ಅಭಿಷೇಕ್ ಬ್ಯಾನರ್ಜಿ ಸೇರಿ ಹಲವು ಪ್ರಮುಖರು ಕಣದಲ್ಲಿದ್ದಾರೆ.